ಅನಂತಕುಮಾರ್ ಹೆಗಡೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
ಬೆಂಗಳೂರು: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದಾಬಸ್‌ಪೇಟೆ ಬಳಿಯ ಹಳೇ ನಿಜಗಲ್‌ನಲ್ಲಿ ನಡೆದಿದ್ದ ಗಲಾಟೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಮಾಜಿ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಆದರೆ, ಅನಂತಕುಮಾರ್ ಹೆಗಡೆ ಅವರು ಪೊಲೀಸ್ ತನಿಖೆಗೆ ಸಹಕರಿಸಬೇಕು ಎಂದು ಸಲಹೆ ನೀಡಿದೆ.
ಘಟನೆಗೆ ಸಂಬಂಧಿಸಿದಂತೆ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಅನಂತ ಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ: ತುಮಕೂರಿನಲ್ಲಿ ಮದುವೆಗೆ ಹೋಗಿ, ಏಳು ಮಂದಿ ಇನ್ನೋವಾ ಕಾರಿನಲ್ಲಿ ಹಳೇ ನಿಜಗಲ್ ಬಳಿ ಬರುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಕಾರಿನ ಚಾಲಕ ನಮ್ಮ ಕಾರನ್ನು ನಿಲ್ಲಿಸುವಂತೆ ಹೇಳಿದರು. ಕಾರು ನಿಲುಗಡೆ ಮಾಡುತ್ತಿದ್ದಂತೆಯೇ ಮುಖಕ್ಕೆ ಗುದ್ದಿದರು. ಮತ್ತೊಬ್ಬ ವ್ಯಕ್ತಿ ನಮ್ಮನ್ನು ಕಾರಿನಿಂದ ಹೊರಗೆ ಎಳೆದುಕೊಂಡು ಹಲ್ಲೆ ನಡೆಸಿದರು. ಇದರಿಂದ ಸಲ್ಮಾನ್ ಖಾನ್ ಅವರ ಮೂರು ಹಲ್ಲುಗಳು ಮುರಿದಿವೆ ಎಂದು ಗಾಯಾಳು, ಹಾಲೇನಹಳ್ಳಿಯ ಸೈಫ್ ಖಾನ್ ಎಂಬವರು ದಾಬಸ್ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅಲ್ಲದೆ, ಘಟನೆ ನಡೆದ ಸಂದರ್ಭದಲ್ಲಿ ಅನಂತಕುಮಾರ್ ಹೆಗಡೆ ಕಾರಿನಲ್ಲಿದ್ದರು. ಅವರು ಕರೆದ ತಕ್ಷಣವೇ ಉಳಿದವರು ಬಂದು ನಮ್ಮ ಮೇಲೆ ಹಲ್ಲೆ ಮಾಡಿದರು. ನಮ್ಮ ತಾಯಿ ಮೇಲೆ ಅನಂತಕುಮಾರ್ ಹಲ್ಲೆ ನಡೆಸಿದರು. ಭದ್ರತಾ ಸಿಬ್ಬಂದಿ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದರು ಎಂದು ದೂರು ನೀಡಿದ್ದರು.




