ತೋಟದ ಮನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು-ನಾಳೆ ಶಿಕ್ಷೆ ಪ್ರಕಟ
ಬೆಂಗಳೂರು: ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ.
ಇದರಿಂದ, ಕಳೆದ 14 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್, ಮತ್ತೆ ಜೈಲಿನಲ್ಲಿ ದಿನ ಕಳೆಯುವಂತಾಗಿದೆ.
ಪ್ರಕರಣದ ಸಂಬಂಧ ಪ್ರಜ್ವಲ್ ಪರ ವಕೀಲರು ಮತ್ತು ಸಿಐಡಿಯ ಎಸ್‌ಐಟಿ ಪೊಲೀಸರ ಪರ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದ ಆಲಿಸಿ ಜುಲೈ 18ರಂದು ಕಾಯ್ದಿರಿಸಿದ್ದ ಅಂತಿಮ ತೀರ್ಪನ್ನು ಶುಕ್ರವಾರ ಪ್ರಕಟಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ್ ಭಟ್ ಅವರಿದ್ದ ಪೀಠ, ಪ್ರಜ್ವಲ್ ಅವರನ್ನು ದೋಷಿ ಎಂದು ಘೋಷಿಸಿದೆ.
ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ್ದ ದೂರಿನ ಅನ್ವಯ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು





