12 ಸಾವಿರ ರೂ. ಲಂಚ: ಪುತ್ತೂರು ತಹಶೀಲ್ದಾರ್ ಕಛೇರಿಯ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಬಂಧನ
ಪುತ್ತೂರು: ಆಸ್ತಿಗೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರಕ್ಕೆ 12 ಸಾವಿರ ಲಂಚ ಪಡೆಯುವ ವೇಳೆ ಪುತ್ತೂರು ತಹಶೀಲ್ದಾರ್ ಕಛೇರಿಯ ಭೂ ಸುಧಾರಣಾ ಶಾಖೆಗೆ ಹೋಗಿ ಕೇಸ್ ವರ್ಕರ್ ಸುನೀಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಹಶೀಲ್ದಾರ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




