ಆಶ್ರಮದಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಾಮಿ ಚೈತನ್ಯಾನಂದ ಸರಸ್ವತಿಯ ಬಂಧನ
ಲಕ್ನೋ: ಆಶ್ರಮದಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ ಸಂಪರ್ಕ ನಡೆಸಿದ ಆರೋಪಗಳಿವೆ.
ದೆಹಲಿಯ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯರಾಗಿರುವ ಆರೋಪಿಯು ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ 2009 ಮತ್ತು 2016 ರಲ್ಲಿ ಸಹ ಎರಡು ಲೈಂಗಿಕ ಕಿರುಕುಳದ ದೂರು ದಾಖಲಾಗಿದ್ದವು.
ಸ್ವಾಮೀಜಿ, ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆಸಿಕೊಂಡು ಉಚಿತ ವಿದೇಶ ಪ್ರವಾಸಗಳ ಆಮಿಷ ಒಡ್ಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದರು. ಮಹಿಳಾ ಹಾಸ್ಟೆಲ್‌ನಲ್ಲಿ ರಹಸ್ಯವಾಗಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಆರೋಪಗಳು ಹೊರಬಿದ್ದ ನಂತರ, ಆಶ್ರಮದ ಆಡಳಿತ ಮಂಡಳಿ ಚೈತನ್ಯಾನಂದರನ್ನು ಅವರ ಹುದ್ದೆಯಿಂದ ಹೊರಹಾಕಿತ್ತು.




