ದ್ವೇಷ ಭಾಷಣ: ವಿಚಾರಣೆಗೆ ಹಾಜರಾಗಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ನೋಟೀಸ್ ಜಾರಿ
ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಎಫ್ಐಆರ್ ದಾಖಲಾಗಿದ್ದು, ಈ ಕುರಿತಂತೆ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.
ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕಲ್ಲಡ್ಕ ಪ್ರಭಾಕರ ಭಟ್ ಅವರ ಭಾಷಣವು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಪ್ರಸಾರಗೊಂಡಿದೆ. ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತೆ ಅವರು ಮಾತನಾಡಿದ್ದಾರೆ. ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿದ್ದಾರೆ. ಮತದಾರರ ಸಂಖ್ಯೆಯನ್ನು ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ತಾಲ್ಲೂಕಿನ ಈಶ್ವರಿ ಪದ್ಮುಂಜ ಶನಿವಾರ ದೂರು ನೀಡಿದ್ದರು.’




