ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ದತೆ: ಡಾ. ಕೆ. ಸುಧಾಕರ್
ಬೆಂಗಳೂರು: ಕೋವಿಡ್-19 ರೂಪಾಂತರಿ ಒಮಿಕ್ರಾನ್ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಕ್ಕಳನ್ನು ಸಾಂಕ್ರಾಮಿಕದಿಂದ ರಕ್ಷಿಸಲು ರಾಜ್ಯ ಸರ್ಕಾರ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವಂತೆ ರಾಜ್ಯದಲ್ಲಿಯೂ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3ರಿಂದ ಲಸಿಕೆ ನೀಡುವುದನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ರಾಜ್ಯದಲ್ಲಿ ಸುಮಾರು 45 ಲಕ್ಷ ಮಕ್ಕಳಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಿಗೆ ಕೋವಿಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆ ಹೊಂದಿದವರಿಗೆ ಬೂಸ್ಟರ್ ಡೋಸ್ ನೀಡುವುದಕ್ಕೂ ತಯಾರಿ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.