ಮಂಗಳೂರು: ಬಾವಿಯಲ್ಲಿ ಕೋಟೆಕಾರು ಸರ್ಕಾರಿ ಶಾಲೆಯ ಶಿಕ್ಷಕನ ಮೃತದೇಹ ಪತ್ತೆ
ಮಂಗಳೂರು: ಇಲ್ಲಿನ ಕೋಟೆಕಾರು ಕೊಂಡಾಣದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರ ಶವ ಅವರ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೃತರನ್ನು ನರಿಂಗಾಣ ಗ್ರಾಮದ ಕಲ್ಲಾರಕೊಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಕೋಟೆಕಾರು ಕೊಂಡಾಣ ನಿವಾಸಿ ಪ್ರಭಾಕರ್ ಜೋಗಿ (51) ಎಂದು ಗುರುತಿಸಲಾಗಿದೆ.
ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಅನಾರೋಗ್ಯದ ಕಾರಣದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೂಲಗಳ ಪ್ರಕಾರ, ಪ್ರಭಾಕರ್ ಜೋಗಿ ಅವರು ಕಳೆದ ಶುಕ್ರವಾರ ಬೆಳಿಗ್ಗೆಯಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯವರು ಅವರನ್ನು ಹುಡುಕಾಡಿದಾಗ ಬಾವಿಯಲ್ಲಿ ಶವ ಪತ್ತೆಯಾಗಿದೆ. ಅವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಭಾಕರ್ ಜೋಗಿ ಅವರು ಮಂಗಳೂರು ಮತ್ತು ಉಳ್ಳಾಲ ತಾಲೂಕಿನ ಹಲವು ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಅವರು ಕೇವಲ ಶಿಕ್ಷಕರಷ್ಟೇ ಅಲ್ಲದೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಜೆಸಿಐ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕುಶಲ ಕಾರ್ಯಕ್ರಮ ನಿರೂಪಕರಾಗಿ ಗುರುತಿಸಿಕೊಂಡಿದ್ದರು. ಶಿಕ್ಷಕರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಕ್ಷ ಯೋಗ ಪಟುವಾಗಿಯೂ ಹೆಸರುವಾಸಿಯಾಗಿದ್ದರು.
ಮೃತರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





