ನನಗೆ ಮತ್ತು ಕುಟುಂಬಕ್ಕೆ Z ಶ್ರೇಣಿ ಭದ್ರತೆ ಒದಗಿಸಿ: ಬಳ್ಳಾರಿ ಗಲಾಟೆ ಬಗ್ಗೆ ಅಮಿತ್ ಶಾ, ಸಿಎಂಗೆ ಪತ್ರ ಬರೆದ ಜನಾರ್ದನ ರೆಡ್ಡಿ
ಬಳ್ಳಾರಿ: ತನಗೆ ‘ಝೆಡ್’ ಶ್ರೇಣಿಯ ಭದ್ರತೆ ಒದಗಿಸಲು ಆಗ್ರಹಿಸಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಅತ್ಯಂತ ಆಘಾತ ಮತ್ತು ಆಕ್ರೋಶದೊಂದಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ ಎಂದು ತಿಳಿಸಿರುವ ಜನಾರ್ದನ ರೆಡ್ಡಿ, ಜ.1 ಹೊಸ ವರ್ಷದ ದಿನದಂದೇ ಬಳ್ಳಾರಿಯ ನನ್ನ ನಿವಾಸದ ಮೇಲೆ ಭೀಕರ ದಾಳಿ ನಡೆದಿದೆ. ಇದು ಸಾಮಾನ್ಯ ರಾಜಕೀಯ ಘರ್ಷಣೆಯಲ್ಲ. ಬದಲಾಗಿ, ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಅವರ ಗೂಂಡಾ ಪಡೆಯು ನನ್ನನ್ನು ವ್ಯವಸ್ಥಿತವಾಗಿ ಮುಗಿಸಲು ನಡೆಸಿದ ಪೂರ್ವನಿಯೋಜಿತ ‘ಹತ್ಯೆಯ ಸಂಚು’ ಇದಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ನನಗೆ ಮತ್ತು ನನ್ನ ಕುಟುಂಬಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ‘ಝಡ್’ (Z Category) ಅಥವಾ ಅದಕ್ಕೆ ಸಮಾನವಾದ ಉನ್ನತ ಪೊಲೀಸ್ ಭದ್ರತೆ ಒದಗಿಸಬೇಕು. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಸಾವಿಗೆ ಕಾರಣರಾದ ಮತ್ತು ಪೆಟ್ರೋಲ್ ಬಾಂಬ್ ಬಳಸಿದ ಶಾಸಕ ಭರತ್ ರೆಡ್ಡಿ, ಸತೀಶ್ ರೆಡ್ಡಿ ಮತ್ತು ಅವರ ಸಹಚರರ ಮೇಲೆ ಕೊಲೆ ಮೊಕದ್ದಮೆ ದಾಖಲಿಸಿ ಬಂಧಿಸಬೇಕು. ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ನನಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಸರಕಾರ ವಿಫಲವಾಗಿ, ಮುಂದಿನ ದಿನಗಳಲ್ಲಿ ನನ್ನ ಅಥವಾ ನನ್ನ ಕುಟುಂಬದ ಮೇಲೆ ಯಾವುದೇ ದಾಳಿ ನಡೆದರೆ, ಅದಕ್ಕೆ ನೇರವಾಗಿ ರಾಜ್ಯ ಸರಕಾರವೇ ಹೊಣೆಯಾಗುತ್ತದೆ ಎಂದು ಈ ಮೂಲಕ ಎಚ್ಚರಿಸ ಬಯಸುತ್ತೇನೆ ಎಂದು ಸಿಎಂ ಗೆ ಬರೆದಿರುವ ಪತ್ರದಲ್ಲಿ ಜನಾರ್ದನ ರೆಡ್ಡಿ ಉಲ್ಲೇಖಿಸಿದ್ದಾರೆ.




