ಪುತ್ತೂರು: 106 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ
ಪುತ್ತೂರು: ಮಾದಕ ವಸ್ತುಗಳ ವಿರುದ್ದ ಸಮರ ಸಾರಿರುವ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆ ಅತಿದೊಡ್ಡ ಕಾರ್ಯಾಚರಣೆಯ ಮೂಲಕ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದ 106 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ,
ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ. (37) ಮತ್ತು ಅಬ್ದುಲ್ ಸಾದಿಕ್ (37) ಎಂದು ಗುರುತಿಸಲಾಗಿದೆ.
ಕಾರು ಮತ್ತು ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ನು ಆಧರಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಜನವರಿ 19ರಂದು ಸಂಜೆ ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ.
ಈ ವೇಳೆ ಆರೋಪಿ ರಫೀಕ್ ಪಿ. ಚಲಾಯಿಸುತ್ತಿದ್ದ ಕಾರಿನಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿಗಳಿದ್ದ ಕಟ್ಟುಗಳು ಪತ್ತೆಯಾಗಿವೆ. ಸಾದಿಕ್ ಚಲಾಯಿಸುತ್ತಿದ್ದ ಗೂಡ್ಸ್ ವಾಹನವನ್ನು ಪರಿಶೀಲಿಸಿದಾಗ 106 ಕೆಜಿ, 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿದೆ. ಅವುಗಳ ಒಟ್ಟು ಅಂದಾಜು ಮೌಲ್ಯ 53,03,000 ರೂ. ಎಂದು ಎಸ್ಪಿ ತಿಳಿಸಿದ್ದಾರೆ.




