ತುಮಕೂರು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಮೂವರು ಸಾವು
ತುಮಕೂರು: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕಾರಿನಲ್ಲಿದ್ದ ಉತ್ತರ ಪ್ರದೇಶ ಆಗ್ರಾ ನಿವಾಸಿ ಅನಿಕೇತ್(25), ಆಂಧ್ರ ಪ್ರದೇಶ ರಾಜ್ಯ ಸನ್ಮುಕ್ತಿ(35) ಹಾಗೂ ಪಂಜಾಬ್ ಜಲಂಧರ್ ನ ಅಬೀರ್(25) ಎಂದು ಗುರುತಿಸಲಾಗಿದೆ.
ಮೃತರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಕಡೆ ಪ್ರವಾಸಕ್ಕೆ ತೆರಳಿದ್ದು, ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಹಾಗೂ ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.




