ಬಂಟ್ವಾಳ ಪುರಸಭೆಯ ಅವ್ಯವಹಾರಗಳ ಕುರಿತು ಜಿಲ್ಲಾಧಿಕಾರಿಗೆ ಎಸ್‌ಡಿಪಿಐ ಮನವಿ
ಬಂಟ್ವಾಳ: ಪುರಸಭೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಆಡಳಿತಾತ್ಮಕ ಕುಂದುಕೊರತೆಗಳು ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್.ವಿ. ಅವರನ್ನು ಭೇಟಿ ಮಾಡಿ, ಅವ್ಯವಹಾರಗಳ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಮನವಿ ಸಲ್ಲಿಸಿತು

ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದಲ್ಲಿ ನಡೆದ ಈ ಭೇಟಿ ವೇಳೆ ಪುರಸಭೆಯ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವ ಅಗತ್ಯತೆ, ಸಾರ್ವಜನಿಕ ಸೇವೆಗಳ ಸುಧಾರಣೆ ಹಾಗೂ ಬಾಕಿ ಇರುವ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಂಬಂಧಿಸಿದಂತೆ ವಿವರವಾದ ಚರ್ಚೆಯನ್ನು ನಡೆಸಿ, ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಕೂಡಲೇ ಬಂಟ್ವಾಳ ಪುರಸಭೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಅವ್ಯವಹಾರ ಪತ್ತೆ ಹಚ್ಚಲು ಉನ್ನತ ಮಟ್ಟದ ತನಿಖೆಯ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಹಾಗೂ ಪಾಣೆಮಂಗಳೂರು ಸಿಟಿ ಕೌನ್ಸಿಲ್ ಕಾರ್ಯದರ್ಶಿ ಇಮ್ರಾನ್ ಬಂಟ್ವಾಳ ಉಪಸ್ಥಿತರಿದ್ದರು.




