ಕಾರ್ಕಳ: ದನ ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನ: ರಾಘವೇಂದ್ರ ಮತ್ತು ಸುಧೀಂದ್ರ ಶೆಟ್ಟಿ ಎಂಬವರ ಬಂಧನ
ಕಾರ್ಕಳ: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 17/02/2026 ರಂದು ರಾತ್ರಿ ಸುಮಾರು 10:30 ಗಂಟೆಗೆ ರಾಘವೇಂದ್ರ (36) ಮತ್ತು ಸುಧೀಂದ್ರ ಶೆಟ್ಟಿ @ ಬಾಬು (36) ಅವರು ಪೆರ್ಡೂರು ದೇವಸ್ಥಾನದ ಎದುರಿನ ಗದ್ದೆಯಲ್ಲಿ ಮೇಯುತ್ತಿದ್ದ ಕರುವನ್ನು ಕಳವು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಕರುವನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಆಟೋ ರಿಕ್ಷಾದಲ್ಲಿ ಸಾಗಿಸಲು ಯತ್ನಿಸಿದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 14/2026ರಂತೆ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2), 62 ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ 2020 ರ ಕಲಂ 5 ಮತ್ತು 12ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಉಡುಪಿ ಉಪ ವಿಭಾಗ ಪೊಲೀಸ್ ಕಚೇರಿ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು ಅವರ ನಿರ್ದೇಶನದಂತೆ ಹಾಗೂ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




