ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು
ಕೊಡಗು: ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿದ್ದು, ಕಾಡಾನೆ ದಾಳಿಯಿಂದ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಬೆಟ್ಟತ್ತೂರು ಗ್ರಾಮದ ಪೂಜಾ ಮೃತ ದುರ್ದೈವಿ.
ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
ಈ ಘಟನೆಯಿಂದ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಮದೆನಾಡು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಮೈಸೂರು – ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಜಮಾಯಿಸಿದ ಗ್ರಾಮಸ್ಥರು, ರೈತಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಹೆದ್ದಾರಿಯನ್ನು ತಡೆದು ಅರಣ್ಯ ಅಧಿಕಾರಿಗಳು ಹಾಗೂ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.




