ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೀದರ್: ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಶಾಲಾ ಕಟ್ಟಡದ ಮಹಡಿಯ ಮೇಲಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮದಿಯಾ ನಶೀರ್ ಪಾಷಾ ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾದವರು. ಅವರು ಭೆಮಳಖೇಡ ಗ್ರಾಮದ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ವಿದ್ಯಾರ್ಥಿನಿಯನ್ನು ಸಹಪಾಠಿ ಚುಡಾಯಿಸುತ್ತಿರುವ ದೃಶ್ಯಗಳು ಸೆರೆಯಾಗಿರುವುದಾಗಿ ಹೇಳಲಾಗುತ್ತಿದೆ.
ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.




