ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ದೇರಳಕಟ್ಟೆಯ ಮದನಿನಗರ ಸಮೀಪದ ಕೆ2 ಅಪಾರ್ಟ್‌ಮೆಂಟ್ ನಿವಾಸಿ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಬಂಧಿತ ಆರೋಪಿ.
ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಒಟ್ಟು 10 ಗಂಭೀರ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಈತ, ನಂತರ ವಿಚಾರಣೆಗೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದನು. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 4, ಕೊಣಾಜೆ ಠಾಣೆಯಲ್ಲಿ 2, ಉತ್ತರ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ.
ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಫರಾಜ್ ವಿರುದ್ಧ ಪ್ರಸ್ತುತ 6 ವಾರಂಟ್ಗಳು ಹಾಗೂ 1 ಪ್ರೊಕ್ಲಮೇಶನ್ ಜಾರಿಯಲ್ಲಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆರೋಪಿಯನ್ನು ದಸ್ತಗಿರಿ ಮಾಡಿ, ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.




