ಮಂಗಳೂರು: ಕೊಲೆಯತ್ನ, ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ
ಮಂಗಳೂರು: ಕೊಲೆಯತ್ನ, ದರೋಡೆ ಸೇರಿದಂತೆ ಹತ್ತಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದೇರಳಕಟ್ಟೆಯ ಮದನಿನಗರದ ನಿವಾಸಿಯಾದ ಫರಾಜ್ ವಿರುದ್ಧ ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಈತ ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಈ ಹಿಂದೆ 6 ವಾರಂಟ್‌ಗಳು ಹಾಗೂ 1 ಪ್ರೊಕ್ಲಮೇಶನ್ ಜಾರಿಯಲ್ಲಿದ್ದವು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ವಿಚಾರಣೆಗೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ.
ಫರಾಜ್ ವಿರುದ್ಧ ಉಳ್ಳಾಲದಲ್ಲಿ 4, ಕೊಣಾಜೆಯಲ್ಲಿ 2, ಉತ್ತರ ಠಾಣೆಯಲ್ಲಿ 2 ಹಾಗೂ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ. ದರೋಡೆ, ಅಪಹರಣ, ಮಾದಕ ವಸ್ತು ಮಾರಾಟ ಮಾತ್ರವಲ್ಲದೆ, ಕಾರಾಗೃಹದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪವೂ ಈತನ ಮೇಲಿದೆ. ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.




