ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್: ಆರೋಪಿಯ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ (22) ಎಂಬಾತನನ್ನು ಮಂಗಳೂರಿನ ಕಂಕನಾಡಿ ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
2025ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರದ ದಿನಗಳಲ್ಲಿ, ‘TN- MADDY’ ಎಂಬ ಸಾಮಾಜಿಕ ಜಾಲತಾಣದ ಖಾತೆಯ ಮೂಲಕ ಕೋಮು ಪ್ರಚೋದನೆ ನೀಡುವಂತಹ ವಿಷಯಗಳನ್ನು ಹಂಚಿಕೊಳ್ಳಲಾಗಿತ್ತು.
ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ (BNS) ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು, ಈ ಖಾತೆಯನ್ನು ನಿರ್ವಹಿಸುತ್ತಿದ್ದವರು ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ ಎಂದು ಪತ್ತೆಹಚ್ಚಿದ್ದಾರೆ.
ಬಂಧಿತ ಆರೋಪಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆರೋಪಿ ಪವನ್ ವಿರುದ್ಧ ಈಗಾಗಲೇ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲೂ ಇಂತಹುದೇ ಪ್ರಕರಣ ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.




