March 26, 2026

25 ಕ್ಕೂ ಅಧಿಕ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ವಿಡಿಯೋ ಲೀಕ್ ಬೆನ್ನಲ್ಲೇ ಗೋವಾದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

0
image_editor_output_image1841721401-1774514695117.jpg

ಪಣಜಿ: ದಕ್ಷಿಣ ಗೋವಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಪುರಸಭೆಯ ಬಿಜೆಪಿ ಕೌನ್ಸಿಲರ್ ಪುತ್ರನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತನನ್ನು ಮಡೆಗಲ್–ಕಾಕೋರಾ ನಿವಾಸಿ ಸೋಹಮ್ ನಾಯಕ್ ಎಂದು ಗುರುತಿಸಲಾಗಿದೆ. ಕರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಪುತ್ರನಾದ ಈತನ ಮೇಲೆ 25ರಿಂದ 30ರ ನಡುವೆ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಈ ಕೃತ್ಯಗಳಲ್ಲಿ ತೊಡಗಿದ್ದಾನೆ ಎನ್ನಲಾಗಿದೆ. ದೌರ್ಜನ್ಯ ನಡೆಸಿದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ನಂತರ ಅದನ್ನು ಆಧಾರವಾಗಿ ಬಳಸಿಕೊಂಡು ಬಾಲಕಿಯರನ್ನು ಬೆದರಿಸಿ ಬ್ಲಾಕ್‌ಮೇಲ್ ಮಾಡುತ್ತಿದ್ದನೆಂಬುದು ಬಹಿರಂಗವಾಗಿದೆ.

ಈ ಘಟನೆ ಬಹಿರಂಗವಾಗುತ್ತಿದ್ದಂತೆಯೇ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ವಾರ ನಡೆದ ಖಾಸಗಿ ಪಾರ್ಟಿಯೊಂದರಲ್ಲಿ ಆರೋಪಿ ತನ್ನ ಸ್ನೇಹಿತರಿಗೆ ವಿಡಿಯೋ ತೋರಿಸಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಗೋವಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಪಾಟ್ಕರ್, ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಗಾಗಿ ತನಿಖೆಯನ್ನು ಮುಂದುವರೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!