ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ ಕಾರ್ಯಕ್ರಮವು ಮಾ.28ರಂದು ಮಂಗಳ ಗಂಗೋತ್ರಿಯ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮಯದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪದ್ಮಶ್ರೀ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನದ ಮೇರು ಸಾಧಕ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲ ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿವಿಯ ಸಹಕುಲಾಧಿಪತಿಯೂ ಆಗಿರುವ ಡಾ.ಎಂ.ಸಿ. ಸುಧಾಕರ್ ಉಪಸ್ಥಿತರಿರುವರು. ಸಂಸದ ಕ್ಯಾ.ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.




