May 31, 2026

ವಿಟ್ಲದ 14 ವರ್ಷದ ಬಾಲಕ ಚಿಕ್ಕಮಗಳೂರಿನಲ್ಲಿ ನೀರಿನಲ್ಲಿ ಮುಳುಗಿ ಮೃತ್ಯು

0
image_editor_output_image74614770-1776056015175

ವಿಟ್ಲ: ಶಿಕ್ಷಕರ ಜೊತೆ ಈಜಲು ಹೋಗಿದ್ದ ವಿಟ್ಲದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಪ್ಪ ಜಯಪುರದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿಯು ವಿಟ್ಲದ ಬಾಲಕನಾಗಿದ್ದಾನೆ.

ಘಟನೆಯ ವಿವರ: ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನಿಕೇತ್ (14) ಮೃತಪಟ್ಟ ದುರ್ದೈವಿ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಈಜಾಡುತ್ತಿದ್ದ ವೇಳೆ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದನು. ತಕ್ಷಣವೇ ಆತನನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಮೃತ ಅನಿಕೇತ್ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕಾಶಿಮಠ ನಿವಾಸಿ ಗೋವರ್ಧನ್ ನಾಯಕ್ ಅವರ ಪುತ್ರ. ಗೋವರ್ಧನ್ ನಾಯಕ್ ಅವರು ಜೀವವಿಮಾ ಪ್ರತಿನಿಧಿಯಾಗಿದ್ದು, ವಿಟ್ಲ ಖಾಸಗೀ ಬಸ್ಸು ನಿಲ್ದಾಣದ ಬಳಿ ಜೀವವಿಮಾ ನಿಗಮದ ಕಚೇರಿಯನ್ನು ಹೊಂದಿದ್ದಾರೆ. ಹಿಂದೂ ಸಂಘಟನೆಗಳು ಸೇರಿದಂತೆ ಹಲವಾರು ಧಾರ್ಮಿಕ ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಮಗನ ಅಕಾಲಿಕ ಮರಣದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ವಿದ್ಯಾರ್ಥಿಯ ಮರಣೋತ್ತರ ಪರೀಕ್ಷೆ ಈಗಾಗಲೇ ನಡೆಸಲಾಗಿದ್ದು, ಇಂದು ರಾತ್ರಿಯೇ ಜಯಪುರದಿಂದ ವಿಟ್ಲಕ್ಕೆ ಮೃತದೇಹ ತರಲಾಗುವುದು. ನಾಳೆ(ಸೋಮವಾರ) ಬೆಳಗ್ಗೆ ವಿಟ್ಲದ ಹಿಂದೂ ರುದ್ರಭೂಮಿಯಲ್ಲಿ ಮೃತ ವಿದ್ಯಾರ್ಥಿಯ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಖಚಿತ ಮೂಲಗಳು ತಿಳಿಸಿವೆ.

ಈ ಘಟನೆಗೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!