April 17, 2026

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

0
image_editor_output_image-767808980-1776426333797.jpg

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ಯೋಗೀಶ್‌ ಗೌಡ ಕುಟುಂಬಕ್ಕೆ 16 ಲಕ್ಷ ಪರಿಹಾರ
ಟಿಂಕರಿಕರ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗದೇ ಇದ್ದರೂ, ಭ್ರಷ್ಟಾಚಾರ ಎಸಗಿದ್ದಾರೆ ಅನ್ನೋ ಆರೋಪ ಸಾಬೀತಾದ ಹಿನ್ನೆಲೆ ಕೋರ್ಟ್‌ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ ಬಸವರಾಜ್‌ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಖಚಿತಪಡಿಸಿದೆ. ಮೃತ ಯೋಗೀಶ್‌ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್‌ ಸೂಚನೆ ನೀಡಿದೆ.

ಏನಿದು ಪ್ರಕರಣ?
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು. ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು.

ಇಂದು ಆದೇಶ ಪ್ರಕಟಿಸಿದ ಕೋರ್ಟ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!