June 10, 2026

ಕುಂದಾಪುರ: ಉಮಾಮಹೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
image_editor_output_image1441536972-1777098140958.jpg

ಕುಂದಾಪುರ: ಆಜ್ರಿ ಗ್ರಾಮದ ಪ್ರಸಿದ್ಧ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಮತ್ತು ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ.

ಕಳೆದ ಏಪ್ರಿಲ್ 20ರಂದು ಬೆಳಿಗ್ಗೆ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ನುಗ್ಗಿ, ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ. ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.

ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, ಮೂರು ಮೊಬೈಲ್ ಫೋನ್‌ಗಳು ಹಾಗೂ ಕಳವು ಮಾಡಲಾದ ದೇವಸ್ಥಾನದ ಕಾಣಿಕೆ ಹುಂಡಿ ಸೇರಿದಂತೆ ಅಂದಾಜು 1.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಂಕರನಾರಾಯಣ ಠಾಣೆಯ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!