ಕಡಬ: ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಾಗಾಟ: ಪೊಲೀಸರ ದಾಳಿ
ಕಡಬ: ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡವೊಂದನ್ನು ಕಡಬ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮರಳು ಮತ್ತು ಸಾಗಾಟಕ್ಕೆ ಬಳಸುತ್ತಿದ್ದ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಏಪ್ರಿಲ್ 26 ರಂದು ಕಡಬ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಅವರು ಸಿಬ್ಬಂದಿಗಳೊಂದಿಗೆ ತನಿಖೆಗಾಗಿ ಬಲ್ಯ ಗ್ರಾಮದ ಕಡೆಗೆ ತೆರಳುತ್ತಿದ್ದರು. ಈ ವೇಳೆ ಹೊಸ್ಮಠ ಎಂಬಲ್ಲಿ ಅಕ್ರಮ ಮರಳುಗಾರಿಕೆಯ ಬಗ್ಗೆ ಖಚಿತ ಮಾಹಿತಿ ಲಭಿಸಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಕೊಲ್ಯದಕಟ್ಟದ ಗುಂಡ್ಯ ಹೊಳೆಯ ದಡಕ್ಕೆ ದಾಳಿ ನಡೆಸಿದ್ದಾರೆ.
ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುವ ಈ ಸ್ಥಳದಲ್ಲಿ ಅಕ್ರಮವಾಗಿ ಮರಳನ್ನು ರಾಶಿ ಹಾಕಿ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದ ಮೂವರು ವ್ಯಕ್ತಿಗಳನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಇಲ್ಲದೆ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸುತ್ತಿರುವುದು ಬೆಳಕಿಗೆ ಬ೦ದಿದೆ.





