May 2, 2026

ಭೀಕರ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವು

0
image_editor_output_image281896620-1777702357362.jpg

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್‌ನ ಹೊರ ವರ್ತುಲ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಂಶಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಪೆಧಗೋಲ್ಕೊಂಡ ಪ್ರದೇಶದ ಒಆರ್‌ಆರ್ ಎಕ್ಸಿಟ್-16ರಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಲಾರಿಯ ಹಿಂಭಾಗದಲ್ಲಿ ಸಂಪೂರ್ಣವಾಗಿ ಸಿಲುಕಿಕೊಂಡಿದ್ದು, ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಟ್ಟು ಏಳು ಜನರಿದ್ದರು ಎನ್ನಲಾಗಿದೆ.

ಮೃತರೆಲ್ಲರೂ ತೆಲಂಗಾಣದ ಸಿರ್ಸಿಲ್ಲಾ ಪಟ್ಟಣದ ನಿವಾಸಿಗಳಾಗಿದ್ದು, ಪ್ರಸ್ತುತ ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಾದಗಿರಿಗುಟ್ಟದ ದರ್ಶನ ಮುಗಿಸಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!