May 8, 2026

ಯಕ್ಷಗಾನ ಕಲಾವಿದರ ಅವಹೇಳನ, ಜೀವ ಬೆದರಿಕೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

0
image_editor_output_image905121941-1778223708429.jpg

ಮಂಗಳೂರು: ಯಕ್ಷಗಾನ ಕಲಾವಿದರು ಮತ್ತು ಅವರ ಪೋಷಕರನ್ನು ಅವಹೇಳನ ಮಾಡಿದ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ವಜಾಗೊಳಿಸಿದೆ.

ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಮತ್ತು ಅವರ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನೆಲೆಯಲ್ಲಿ ಲೀಲಾವತಿ ಶೆಟ್ಟಿಗಾರ್ ಅವರು ಏಪ್ರಿಲ್ 13ರಂದು ಪುತ್ತೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ ಹಾಗೂ ಮಹಿಳೆಯ ಘನತೆಗೆ ಧಕ್ಕೆ ತಂದಿರುವ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಅಲ್ಲದೆ ಕಲಾವಿದರಾದ ಸುಂದರ ರೈ ಮತ್ತು ಪ್ರಜ್ವಲ್ ಕುಮಾರ್ ಅವರಿಗೂ ಬೈದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಕರಣ ದಾಖಲಾದ ಹಿನ್ನಲೆ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನಿಗೆ ನ್ಯಾಯಾಲಯದ ಮೊರೆ ಹೋಗಿದ್ದರು. ಈ ವೇಳೆ ಸರ್ಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ. ಅವರು ವಾದ ಮಂಡಿಸಿ, 1992ರಿಂದ ತಿಮರೋಡಿ ವಿರುದ್ಧ 31 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದರು. ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪೊಂದನ್ನು ಉಲ್ಲೇಖಿಸಿ ಜಾಮೀನು ನೀಡದಂತೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರಾಜೇಶ್ ಮಾರುತಿ ಕಮಟೆ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದೀಗ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲೂ ಇನ್ನೊಂದು ಪ್ರಕರಣ ದಾಖಲಾಗಿದ್ದು, ಅದಕ್ಕೂ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!