ಮಂಗಳೂರು: 35ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ ಪತ್ತೆ: ಕಾಲೇಜ್ ವಿದ್ಯಾರ್ಥಿನಿಯ ಬಂಧನ
ಮಂಗಳೂರು: ನಗರದಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಮಂಗಳೂರು ನಗರ ಪೊಲೀಸರು, ಮುಲ್ಕಿಯಲ್ಲಿ ಭಾರಿ ಮೊತ್ತದ ‘ಹೈಡ್ರೋವೀಡ್ ಗಾಂಜಾ’ ಮಾರಾಟಕ್ಕೆ ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡಲು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಣಂಬೂರು ಎಸಿಪಿ ಮತ್ತು ಮುಲ್ಕಿ ಪೊಲೀಸರ ಜಂಟಿ ತಂಡ ದಾಳಿ ನಡೆಸಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ (BCA) ವ್ಯಾಸಂಗ ಮಾಡುತ್ತಿರುವ ಸುಹಾನ (21) ಎಂಬಾಕೆಯನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತಳಿಂದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವೀಡ್ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿತೆಯು ಈ ಗಾಂಜಾವನ್ನು ಚೆನ್ನೈನಿಂದ ತರಿಸಿಕೊಂಡಿದ್ದಳು ಎನ್ನಲಾಗಿದೆ. ಮಂಗಳೂರಿನಲ್ಲಿ ಇದನ್ನು ಅಕ್ರಮವಾಗಿ ಪೂರೈಸಿ ಅತಿ ಹೆಚ್ಚಿನ ಲಾಭ ಗಳಿಸುವ ಉದ್ದೇಶ ಆಕೆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ವಿದ್ಯಾರ್ಥಿನಿ ಸುಹಾನಾ ವಿರುದ್ಧ ಈ ಹಿಂದೆಯೂ ಮಾದಕ ದ್ರವ್ಯ ಪ್ರಕರಣಗಳು ದಾಖಲಾಗಿವೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





