ನೀಟ್ ಅವ್ಯವಸ್ಥೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ:CET ವ್ಯವಸ್ಥೆ ಮರುಜಾರಿಗೆ ಮಹಿಳಾ ಕಾಂಗ್ರೇಸ್ ಜಿಲ್ಲಾದ್ಯಕ್ಷೆ ಉಷಾ ಅಂಚನ್ ಒತ್ತಾಯ*
ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಅನಿಶ್ಚಿತತೆ ಸೃಷ್ಟಿಸಿದ್ದು, ಕೇಂದ್ರದ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಮಹಿಳಾ ಕಾಂಗ್ರೆಸ್ ದಕ್ಷಿಣ ಕನ್ನಡ ಗ್ರಾಮೀಣ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಕರ್ನಾಟಕದ ವಿದ್ಯಾರ್ಥಿಗಳಿಗೆ ಈ ಹಿಂದೆ CET ಪರೀಕ್ಷೆಯ ಮೂಲಕ ವೈದ್ಯಕೀಯ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ಕೋರ್ಸ್‌ಗಳಿಗೆ ಸಮಾನ ಅವಕಾಶ ದೊರೆಯುತ್ತಿತ್ತು. ಆದರೆ NEET ವ್ಯವಸ್ಥೆ ಜಾರಿಯಾದ ಬಳಿಕ ರಾಜ್ಯದ ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ಗ್ರಾಮೀಣ ಭಾಗದ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಶೈಕ್ಷಣಿಕ ಕ್ಷೇತ್ರದಲ್ಲಿ “ಎಜುಕೇಶನಲ್ ಹಬ್” ಎಂದು ಗುರುತಿಸಿಕೊಂಡಿರುವ ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳಿಗೂ NEET ಪರೀಕ್ಷಾ ವ್ಯವಸ್ಥೆಯಿಂದ ಅನ್ಯಾಯವಾಗುತ್ತಿದೆ. ಕೋಚಿಂಗ್ ಕೇಂದ್ರಗಳ ಅವಲಂಬನೆ ಹೆಚ್ಚಾಗಿರುವುದರಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದ್ದು, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸುತ್ತಿವೆ. ಆದ್ದರಿಂದ ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದಿನ CET ವ್ಯವಸ್ಥೆಯನ್ನು ಪುನಃ ಜಾರಿಗೆ ತರಲು ಕೇಂದ್ರ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಜೊತೆಗೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶ್ರೀಮತಿ ಉಷಾ ಅಂಚನ್ ಆಗ್ರಹಿಸಿದ್ದಾರೆ.





