ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಬೈಕ್: ಸವಾರ ಸ್ಥಳದಲ್ಲೇ ಸಾವು
ಆನೇಕಲ್: ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆನೇಕಲ್‌ನ ವಣಕನಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ.
ಅಸ್ಸಾಂ ಮೂಲದ ಅನ್ವರ್ ಮೃತ ಯುವಕ. ಹಿಂಬದಿ ಸವಾರ ಪುತುಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಮಿಳುನಾಡಿನಿಂದ ಆನೇಕಲ್ ಮಾರ್ಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಬೈಕ್ ಸವಾರ ಮುಂದಾದಾಗ ವಾಹನದ ನಿಯಂತ್ರಣ ತಪ್ಪಿ ಬೈಕ್ ಸಮೇತ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದಾರೆ.




