August 11, 2026

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ನೇಮಕ

0
u-t-abdul-khadar-ali-fareed-5495

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರವು, ಸಂಪುಟದ ಪ್ರಮುಖ 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಭಾರಿ ಜವಾಬ್ದಾರಿಯನ್ನು ಸಚಿವ ಯು.ಟಿ. ಖಾದರ್ ಅವರಿಗೆ ನೀಡಲಾಗಿದೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಹಿರಿಯ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹೊಣೆ ನೀಡಲಾಗಿದ್ದರೆ, ಸಚಿವ ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲೆಯ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಹೊಣೆ ವಹಿಸಲಾಗಿದೆ. ರಾಜಧಾನಿಯ ಆಡಳಿತದ ದೃಷ್ಟಿಯಿಂದ ಅತ್ಯಂತ ಕೌತುಕ ಮೂಡಿಸಿದ್ದ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಹಿರಿಯ ಸಚಿವ ಕೃಷ್ಣ ಬೈರೇಗೌಡ ಅವರ ಹೆಗಲಿಗೆ ಹಾಕಲಾಗಿದೆ.

ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಕಿತ್ತೂರು ಕರ್ನಾಟಕ ಭಾಗದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಪ್ರಮುಖ ನಾಯಕ ಪ್ರಿಯಾಂಕ ಖರ್ಗೆಗೆ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳನ್ನು ಹಾಗೂ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಹೊಣೆ ವಹಿಸಲಾಗಿದೆ. ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಮೈಸೂರು ಭಾಗದ ಯುವ ನಾಯಕ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿಯನ್ನು ನೀಡಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!