July 4, 2026

ಕಂದಕಕ್ಕೆ ಉರುಳಿದ ಬಸ್: 40 ಮಂದಿ ಮೃತ್ಯು

0
image_editor_output_image1463447681-1783134077140

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಣಿಕರ ಬಸ್ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 40 ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ವೆಟ್ಟಾದಿಂದ ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ಬಸ್ ಶೆರಾನಿ-ಝೋಬ್ ಹೆದ್ದಾರಿಯ ದನಾಸರ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಅಪಘಾತದ ವೇಳೆ ಬಸ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ವೈದ್ಯಕೀಯ ತುರ್ತು ಪ್ರತಿಕ್ರಿಯೆ ತಂಡ, ಪೊಲೀಸರು ಹಾಗೂ ಜಿಲ್ಲಾಡಳಿತ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಕಂದಕದಲ್ಲಿದ್ದ ಬಸ್‌ನಿಂದ 40 ಮೃತದೇಹಗಳನ್ನು ಹೊರತೆಗೆದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ಆರಂಭದಲ್ಲಿ 36 ಪ್ರಯಾಣಿಕರೊಂದಿಗೆ ಕ್ವೆಟ್ಟಾದಿಂದ ಹೊರಟಿತ್ತು. ಬಳಿಕ ಮಾರ್ಗಮಧ್ಯೆ ಕೆಟ್ಟು ನಿಂತಿದ್ದ ಮತ್ತೊಂದು ಬಸ್‌ನ ಪ್ರಯಾಣಿಕರನ್ನೂ ಇದೇ ಬಸ್‌ಗೆ ಹತ್ತಿಸಲಾಗಿತ್ತು. ಇದರಿಂದ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿ, ಬಸ್ ಓವರ್‌ಲೋಡ್ ಆಗಿತ್ತು ಎನ್ನಲಾಗಿದೆ. ಬಸ್ ಓವರ್‌ಲೋಡ್ ಆಗಿರುವುದು ಹಾಗೂ ಅಪಾಯಕಾರಿ ಪರ್ವತ ರಸ್ತೆಯಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಅಪಘಾತದ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!