ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕೇರಳ ಬಸ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಬೆಂಗಳೂರು: ರಸ್ತೆ ಮಧ್ಯೆಯೇ ಕೇರಳ ಸರ್ಕಾರಿ ಬಸ್ಸೊಂದು ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ಶುಕ್ರವಾರ ನಡೆದಿದೆ.
ನಿನ್ನೆ ಸಂಜೆ ಸುಮಾರು 6 ಗಂಟೆಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನ ಇಂಜಿನ್ ಭಾಗದಲ್ಲಿ ಹೊಗೆ ಬರುತ್ತಿದ್ದಂತೆಯೇ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದ ಆಗಬೇಕಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇನ್ನು ಬೆಂಕಿಯ ತೀವ್ರತೆಗೆ ಬಸ್‌ನ ಮುಂಭಾಗ ಹಾಗೂ ಮತ್ತು ಒಳ ಭಾಗ ಸುಟ್ಟು ಹೋಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು, ಕಂಡಕ್ಟರ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.




