July 9, 2026

ಕ್ರೂಸರ್ ಮತ್ತು ಲಾರಿಯ ನಡುವೆ ಭೀಕರ ರಸ್ತೆ ಅಪಘಾತ: ಆರು ಮಂದಿ ಮೃತ್ಯು

0
IMG-20260709-WA0031

ಯಲ್ಲಾಪುರ: ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಅರಬೈಲ್ ಘಟ್ಟದ ಬಳಗಾರ್ ಸಮೀಪ ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26), ಸಂಜೀವ ಅಂಗಡಿ (33) ಹಾಗೂ ಮಂಜುನಾಥ ಚುಲಕಿ ಎಂದು ಗುರುತಿಸಲಾಗಿದೆ.

ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ವಾಹನದಲ್ಲಿ ಪ್ರಯಾಣಿಸುತ್ತಿದ್ದು, ಅಪಘಾತದ ತೀವ್ರತೆಗೆ ತೂಫಾನ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿ ವಾಹನದೊಳಗೆ ಸಿಲುಕಿದ್ದವರನ್ನು ಹೊರತೆಗೆಯಲಾಯಿತು. ಗಾಯಗೊಂಡ ಶಿವರಾಜ್ ದುರ್ಗಪ್ಪ ಮಡಿವಾಳ್, ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ ಹಾಗೂ ಸಚಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ. ಗೆಳೆಯರ ಗುಂಪು ಧರ್ಮಸ್ಥಳ ಹಾಗೂ ಮಂಗಳೂರು ಕಡೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಅರಬೈಲ್ ಘಟ್ಟದ ತಿರುವಿನಲ್ಲಿ ಎದುರಿನಿಂದ ಬಂದ ಲಾರಿ ಅವರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!