ಮಂಗಳೂರು: 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶಪಡಿಸಿಕೊಂಡ ಪೊಲೀಸರು: ಬೆಳ್ತಂಗಡಿ ಮೂಲದ ಇಬ್ಬರ ಬಂಧನ
ಮಂಗಳೂರು: “ಡ್ರಗ್ಸ್ ಫ್ರೀ ಮಂಗಳೂರು” ಅಭಿಯಾನದಡಿ ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡು, ಬೆಳ್ತಂಗಡಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾರ್ಯಾಚರಣೆಯು ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿದೆ. ಜೂನ್ 25, 2026ರಂದು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು, ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನನ್ನು ಬಂಧಿಸಿ, ಆತನಿಂದ ₹1.50 ಲಕ್ಷ ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು.
ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದರು. ಅದರಂತೆ ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದರು.
ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಇಂಡಬೆಟ್ಟು ಗ್ರಾಮದ ಮೊಹಮ್ಮದ್ ಅಲ್ಫಾಜ್ (28) ಹಾಗೂ ಉಜಿರೆಯ ಹಳೆಪೇಟೆಯ ಮೊಹಮ್ಮದ್ ಮುಸ್ತಾಫಾ (28) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಟ್ಟು 5 ಕೆಜಿ 196 ಗ್ರಾಂ ಎಂಡಿಎಂಎ, ಬ್ಯಾಗ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಪ್ರಮುಖ ಆರೋಪಿ ಮೊಹಮ್ಮದ್ ಅಲ್ಫಾಜ್ ವಿರುದ್ಧ ಈ ಹಿಂದೆ 2024ರಲ್ಲಿ ಕೊಣಾಜೆ ಪೊಲೀಸ್ ಠಾಣೆ ಹಾಗೂ 2026ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ತಂದು, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದಾರೆ.




