ಮಾಣಿ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಮೃತ್ಯು… ಹಲವು ವಿದ್ಯಾರ್ಥಿಗಳಿಗೆ ಗಾಯ
ಬಂಟ್ವಾಳ: ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್‌ವೊಂದರ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದಿದೆ. ಘಟನೆಯಲ್ಲಿ ಓರ್ವ ಬಾಲಕಿ ಮೃತಪಟ್ಟಿದ್ದಾಳೆ
ದುರ್ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆಗೆ ಸೇರಿದ್ದ ಬಸ್ ಇದಾಗಿದ್ದು, ಬಸ್ ನಲ್ಲಿದ್ದ 6 ವರ್ಷದ ಬಾಲಕಿ ಚಿರಾಯಿ ಮೃತಪಟ್ಟಿದ್ದಾಳೆ.
ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಘಾತದ ನಿಖರ ಕಾರಣ, ಗಾಯಾಳುಗಳ ಸಂಖ್ಯೆ ಹಾಗೂ ಅವರ ಆರೋಗ್ಯ ಸ್ಥಿತಿಯ ಕುರಿತು ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಪ್ರಕಟವಾಗಬೇಕಿದೆ.
ಮಳೆ ಮತ್ತು ಬಿರುಗಾಳಿಯ ಪರಿಣಾಮ ಮರ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ




