July 27, 2026

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಆರೋಪಿ ಚೇತನ್ ಪೊಲೀಸರ ವಶಕ್ಕೆ

0
image_editor_output_image1502588697-1785171912144

ಬಂಟ್ವಾಳ: ಜುಲೈ 16ರಂದು ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಪ್ರಕರಣದ ಆರೋಪಿ ಚೇತನ್ ಅವರನ್ನು ವೈದ್ಯರು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ಆರೋಪದ ಪ್ರಕಾರ, ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಏಕಮುಖ ಪ್ರೀತಿಯ ಹಿನ್ನೆಲೆಯಲ್ಲೇ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು.

ಘಟನೆಯ ಮರುದಿನ ಮಂಗಳೂರು ನಗರದ ಪಚ್ಚನಾಡಿ ಪ್ರದೇಶದಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಆತ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಮೊದಲು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭದಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಬಳಿಕ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಕಳೆದ 11 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಇಂದು ಬಂಟ್ವಾಳ ನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಪ್ರಸ್ತುತ ಆರೋಪಿ ಬಂಟ್ವಾಳ ನಗರ ಪೊಲೀಸರ ವಶದಲ್ಲಿದ್ದು, ಕಾನೂನು ಪ್ರಕ್ರಿಯೆಯಂತೆ ಬಂಧನಕ್ಕೆ ಸಂಬಂಧಿಸಿದ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ತನಿಖೆಯ ಅಗತ್ಯವನ್ನು ಆಧರಿಸಿ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದ್ದು, ಈ ಕುರಿತು ಅಂತಿಮ ತೀರ್ಮಾನವನ್ನು ನ್ಯಾಯಾಲಯವೇ ಕೈಗೊಳ್ಳಲಿದೆ.

ಪೊಲೀಸ್ ಕಸ್ಟಡಿ ದೊರೆತಲ್ಲಿ ಆರೋಪಿಯ ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದ ಘಟನೆಗಳ ಕ್ರಮ, ಆರೋಪಿತ ಉದ್ದೇಶ, ಘಟನೆಯ ಪೂರ್ವಾಪರ ಹಾಗೂ ಇತರೆ ಅಂಶಗಳ ಕುರಿತು ತನಿಖೆ ಮುಂದುವರಿಯಲಿದ್ದು, ತನಿಖೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಉದ್ದೇಶದ ಕುರಿತು ಅಧಿಕೃತ ಚಿತ್ರಣ ಸ್ಪಷ್ಟವಾಗುವ ಸಾಧ್ಯತೆ ಇದೆ.

ಈ ಪ್ರಕರಣವು ರಾಜ್ಯಾದ್ಯಂತ ವ್ಯಾಪಕ ಗಮನ ಸೆಳೆದಿದ್ದು, ಆರಂಭದಿಂದಲೇ ಬಂಟ್ವಾಳ ನಗರ ಠಾಣೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳ ಸಂಗ್ರಹ, ತಾಂತ್ರಿಕ ಮಾಹಿತಿ ಪರಿಶೀಲನೆ ಹಾಗೂ ಇತರ ತನಿಖಾ ಕ್ರಮಗಳು ಕಾನೂನುಬದ್ಧವಾಗಿ ಮುಂದುವರಿದಿವೆ.

ಬಂಟ್ವಾಳ ಎ.ಎಸ್.ಪಿ.(ಐಪಿಎಸ್) ಯಶ್ ಕುಮಾರ್ ಶರ್ಮ ಅವರು ನಿರ್ದೇಶನದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ನೇತ್ರತ್ವದಲ್ಲಿ ಈ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!