July 29, 2026

ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

0
IMG-20260729-WA0078

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನಂತೆ ಶಾಸಕ ಯಶ್‌ಪಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 57, 192, 196(2), 352, 353(2) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲರಾದ ಹಬೀಬ್ ಅಲಿ, ಹರೀಶ್ ಪಾಂಗಾಳ ಮೊದಲಾದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!