ಬಂಟ್ವಾಳ: ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆ: ಅಪಾಯದ ಮಟ್ಟ ತಲುಪಿದರೆ ಮುಂಜಾಗ್ರತಾ ಕ್ರಮವಾಗಿ ಜನರನ್ನು ಸ್ಥಳಾಂತರಿಸಲು ಸೂಚನೆ
ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಕರಾವಳಿ ಭಾಗದಲ್ಲಿಯೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
ಶನಿವಾರ ಸಂಜೆ 4 ಗಂಟೆಗೆ ನೇತ್ರಾವತಿ ನದಿಯ ನೀರಿನ ಮಟ್ಟ 5.7 ಮೀಟರ್ ದಾಖಲಾಗಿದ್ದರೆ, ಸಂಜೆ 6 ಗಂಟೆಯ ವೇಳೆಗೆ ಅದು ಏಕಾಏಕಿ 7.7 ಮೀಟರ್‌ಗೆ ಏರಿಕೆಯಾಗಿದೆ. ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಮಳೆ ಮುಂದುವರಿದರೆ ಯಾವುದೇ ಕ್ಷಣದಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಾಲೂಕು ಕೇಂದ್ರವನ್ನು ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ನದಿಯ ನೀರು ಅಪಾಯದ ಮಟ್ಟ ತಲುಪಿದರೆ ನದಿ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹಾಗೂ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ನೀಡಲು ಕ್ರಮ ಕೈಗೊಳ್ಳುವಂತೆ ಶಾಸಕ ರಾಜೇಶ್ ನಾಯ್ಕ್ ಅವರು ತಹಶೀಲ್ದಾರ್ ಮಂಜುನಾಥ್ ಅವರಿಗೆ ನಿರ್ದೇಶನ ನೀಡಿದ್ದಾರೆ.
ಪಾಣೆಮಂಗಳೂರು-ಆಲಡ್ಕ ಪ್ರದೇಶದಲ್ಲಿ ಪ್ರತಿ ವರ್ಷ ನೆರೆ ಉಂಟಾದಾಗ ಸುಮಾರು 30 ಮನೆಗಳು ಜಲಾವೃತವಾಗುತ್ತವೆ. ಈ ಬಾರಿ ನೀರಿನ ಮಟ್ಟ 8.5 ಮೀಟರ್ ತಲುಪಿದರೆ ಮತ್ತೆ ಅಷ್ಟೇ ಸಂಖ್ಯೆಯ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಈಗಾಗಲೇ ಆರು ಮನೆಗಳ ಮೆಟ್ಟಿಲಿನವರೆಗೆ ನೀರು ತಲುಪಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ 15 ಮನೆಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದರ ಜೊತೆಗೆ ತಗ್ಗುಪ್ರದೇಶಗಳಾದ ಕಂಚಿಕಾರ್ ಪೇಟೆ, ಬಸ್ತಿಪಡ್ಪು, ಜಕ್ರಿಬೆಟ್ಟು, ಎಸ್.ವಿ.ಎಸ್.ಶಾಲಾ ಮೈದಾನ, ನಾವೂರ,ನಂದಾವರ ಸಹಿತ ಅನೇಕ ಕಡೆಗಳಲ್ಲಿ ನೀರು ತುಂಬಿ ಜಲಾವೃತವಾಗುತ್ತದೆ. ಹಾಗಾಗಿ ಅವರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ತಾಲೂಕು ಆಡಳಿತವು ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದು, ಅಗತ್ಯವಿದ್ದರೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಹಶೀಲ್ದಾರ್ ಮಂಜುನಾಥ್ ಹಾಗೂ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಎಚ್ಚರಿಕೆಯಿಂದ ಇರಬೇಕು ಹಾಗೂ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ಸಂಭಾವ್ಯ ನೆರೆ ಪರಿಸ್ಥಿತಿಯನ್ನು ಎದುರಿಸಲು ಎಸ್.ವಿ.ಎಸ್. ಶಾಲೆ ಹಾಗೂ ಪಾಣೆಮಂಗಳೂರು ಶಾರದಾ ಹೈಸ್ಕೂಲ್‌ನಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲೂಕು ಕೇಂದ್ರದಲ್ಲೇ ಉಳಿದು ತುರ್ತು ಕರ್ತವ್ಯ ನಿರ್ವಹಿಸಲಿದ್ದಾರೆ.




