ಬಂಟ್ವಾಳ: ಬಿ.ಸಿ ರೋಡ್ ಅಪಾಯಕಾರಿ ಸರ್ಕಲ್ ಬಳಿ ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ನಡುವೆ ಅಪಘಾತ: ಸವಾರರಿಬ್ಬರು ಗಂಭೀರ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಪಾಣೆಮಂಗಳೂರು ಬಳಿಯ ಮರ್ದೋಳಿ ನಿವಾಸಿಗಳಾದ ಯಶವಂತ್ ಮತ್ತು ದಯಾನಂದ ಗಂಭೀರ ಗಾಯಗೊಂಡ ಸವಾರರಾಗಿದ್ದು ಇಬ್ಬರನ್ನು ಸಾರ್ವಜನಿಕರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿ.ಸಿ. ರೋಡ್ ಜಂಕ್ಷನ್ ಬಳಿ ಟಿಪ್ಪರ್ ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಆಕ್ಟಿವಾ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರ ಸ್ವರೂಪದ ಗಾಯಗಳಾಗಿವೆ.
ಅಪಘಾತದ ತೀವ್ರತೆಗೆ ಇಬ್ಬರೂ ರಕ್ತಸಿಕ್ತವಾಗಿ ರಸ್ತೆಯಲ್ಲಿ ಬಿದ್ದಿದ್ದು, ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಿದ್ದಾರೆ.
ಘಟನೆಯಿಂದ ಸ್ಥಳದಲ್ಲಿ ಜನ ಜಮಾಯಿಸಿ ಕೆಲ ಹೊತ್ತುಗಳ ಕಾಲ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ಥ ಉಂಟಾಯಿತು. ಟಿಪ್ಪರ್ ಲಾರಿಯನ್ನು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.




