ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಬಿಗ್ ರಿಲೀಫ್: ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲು ಪಾಕಿಸ್ತಾನ್ ಸುಪ್ರೀಂ ಕೋರ್ಟ್ ಆದೇಶ
ಇಸ್ಮಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತವಾಗಿರುವ ಬೆನ್ನಲ್ಲೇ, ಪಾಕಿಸ್ತಾನದ ಸುಪ್ರೀಂ ಕೋರ್ಟ್ ಅವರಿಗೆ ದೊಡ್ಡ ರಿಲೀಫ್ ನೀಡಿದೆ.
ಭ್ರಷ್ಟಾಚಾರದ ಆರೋಪದ ಮೇಲೆ ಆಗಸ್ಟ್ 2023 ರಿಂದ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರನ್ನು ತಕ್ಷಣವೇ ಇಸ್ಲಾಮಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.
ಕಳೆದ ಮೂರು ವರ್ಷಗಳಿಗೂ ಹೆಚ್ಚು ಕಾಲದಿಂದ ಜೈಲಿನಲ್ಲಿರುವ ಮಾಜಿ ಕ್ರಿಕೆಟ್ ನಾಯಕ ಇಮ್ರಾನ್ ಖಾನ್ ಅವರ ಆರೋಗ್ಯ ತೀರಾ ಹದಗೆಟ್ಟಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹಲವು ವದಂತಿಗಳು ಹಬ್ಬಿದ್ದವು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು (PTI ಕಾರ್ಯಕರ್ತರು) ಪ್ರತಿಭಟನೆಗಳ ಎಚ್ಚರಿಕೆಯನ್ನು ನೀಡಿದ್ದರು.
ಈ ಎಲ್ಲ ಬೆಳವಣಿಗೆಗಳ ನಡುವೆ, ನ್ಯಾಯಾಲಯವು ಮಧ್ಯಪ್ರವೇಶಿಸಿದ್ದು, ಅವರಿಗೆ ಅಗತ್ಯ ವೈದ್ಯಕೀಯ ನೆರವು ನೀಡಲು ಇಸ್ಲಾಮಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದು ಪಾಕಿಸ್ತಾನದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇಮ್ರಾನ್ ಖಾನ್ ಅವರ ಬೆಂಬಲಿಗರಿಗೆ ಕೊಂಚ ನಿರಾಳ ತಂದಿದೆ.





