August 28, 2026

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಆರೋಪಿ ಸೆರೆಗೆ ತೆರಳಿದ್ದ ಬೆಂಗಳೂರಿನ ಸೈಬರ್ ಕ್ರೈಂ ಇನ್ಸ್‌ಪೆಕ್ಟರ್ ಸೇರಿ ನಾಲ್ವರ ದುರ್ಮರಣ

0
IMG-20260828-WA0046

ಮಧ್ಯ ಪ್ರದೇಶ: ಕರ್ತವ್ಯದ ಮೇರೆಗೆ ಆರೋಪಿಯ ಜಾಡು ಹಿಡಿದು ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪ್ರಯಾಣಿಕರು ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಮೃತಪಟ್ಟ ದುರ್ದೈವಿ. ಅವರ ಜತೆಗಿದ್ದ ಸಹೋದ್ಯೋಗಿಗಳಾದ ವಿಶ್ವನಾಥ್ ಮತ್ತು ರಮೇಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾನ್ಪುರದಿಂದ ಇಂದೋರ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಾಜ್‌ಗಢ ಜಿಲ್ಲೆಯ ಬಿಯೋರಾ ಬಳಿಯ ಭೋಪಾಲ್ ಬೈಪಾಸ್ ಮೇಲ್ಸೇತುವೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಭಸವಾಗಿ ತಡೆಗೋಡೆಗೆ ಅಪ್ಪಳಿಸಿದೆ. ಡಿಕ್ಕಿಯ ತೀವ್ರತೆಗೆ ಮೇಲಿನ ಸ್ಲೀಪರ್ ಬರ್ತ್‌ನಲ್ಲಿ ಮಲಗಿದ್ದ ಪ್ರಯಾಣಿಕರು ಕಿಟಕಿಯ ಗಾಜುಗಳನ್ನು ಒಡೆದು ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆ.

ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಇನ್ಸ್‌ಪೆಕ್ಟರ್ ರವಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂತದಲ್ಲಿ ಇತರ 11 ಮಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಬಿಯೋರಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!