ಬಸ್ ಪ್ರಯಾಣ ದರ ಅಲ್ಪ ಪ್ರಮಾಣದಲ್ಲಿ: ಸಾರಿಗೆ ಸಚಿವ ಬೈರತಿ ಸುರೇಶ್ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಅಲ್ಪ ಪ್ರಮಾಣದಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ(ಏರಿಕೆ) ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಮುನ್ಸೂಚನೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಎಂಟು ತಿಂಗಳಲ್ಲಿ ಕೇಂದ್ರ ಸರಕಾರ ತೈಲೋತ್ಪನ್ನ ದರಗಳನ್ನು ಹೆಚ್ಚಳ ಮಾಡಿದೆ. ಹೀಗಿದ್ದರೂ ನಾವು ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಹೇಳಿದರು.
ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಇದರಿಂದ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.





