ಕರಾವಳಿಯಲ್ಲಿ ಸಂಪುಟ ಸಭೆ ನಡೆಸುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ ಶ್ರೀ.ಕುಳಾಲು ಸುಭಾಶ್ಚಂದ್ರ ಶೆಟ್ಟಿ
ಮಂಗಳೂರು: ಕರಾವಳಿ ಭಾಗದತ್ತ ವಿಶೇಷ ಗಮನ ಹರಿಸಿ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಇದು ಕರಾವಳಿಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುವ ಮಹತ್ವದ ಹೆಜ್ಜೆಯಾಗಿದೆ ಎಂದು ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಕರಾವಳಿ ಭಾಗಕ್ಕೆ ವಿಶೇಷ ಆದ್ಯತೆ ನೀಡುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ನೀಡಿತ್ತು. ಆದರೆ ಚುನಾವಣೆಯಲ್ಲಿ ಜಿಲ್ಲೆಯ ಜನತೆ ಆ ಪ್ರಣಾಳಿಕೆಗೆ ನಿರೀಕ್ಷಿತ ಬೆಂಬಲ ನೀಡದಿದ್ದರೂ, ಅದನ್ನು ಮನಸ್ಸಿನಲ್ಲಿಟ್ಟುಕೊಂಡು ದ್ವೇಷದ ರಾಜಕಾರಣ ಮಾಡದೆ, ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯ ಮೂಲಕ ಕರಾವಳಿಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿರುವುದು ಶ್ಲಾಘನೀಯ. ಸಮಗ್ರ ಕರ್ನಾಟಕದ ಸಮಗ್ರ ಅಭಿವೃದ್ಧಿಯೇ ಸರ್ಕಾರದ ಮುಖ್ಯ ಗುರಿಯಾಗಿದೆ ಎಂಬುದನ್ನು ಈ ನಡೆ ಮತ್ತೊಮ್ಮೆ ತೋರಿಸಿಕೊಟ್ಟಿದೆ ಎಂದು ಅವರು ಹೇಳಿದರು.
ಕರಾವಳಿಯ ಯುವಕರು, ವಿದ್ಯಾರ್ಥಿಗಳು, ರೈತರು ಹಾಗೂ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳು ಅರಿವು ಹೊಂದಿದ್ದು, ಈ ಭಾಗದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಂಪುಟ ಸಭೆ ಮಹತ್ವದ ವೇದಿಕೆಯಾಗಲಿದೆ. ಕರಾವಳಿಯ ಅಭಿವೃದ್ಧಿಗೆ ಅಭಿವೃದ್ಧಿಯೇ ಮೂಲಮಂತ್ರವಾಗಬೇಕು ಎಂಬ ಸಂದೇಶವನ್ನು ಸರ್ಕಾರ ಈ ಮೂಲಕ ನೀಡಿದೆ. ಈ ಮಹತ್ವದ ನಿರ್ಧಾರಕ್ಕಾಗಿ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ತಿಳಿಸಿದರು.
ಜಾತಿ, ಮತ, ಭಾಷೆ ಸೇರಿದಂತೆ ಯಾವುದೇ ಭೇದಭಾವವಿಲ್ಲದೆ ಕರಾವಳಿಯ ಪ್ರಜ್ಞಾವಂತ ನಾಗರಿಕರು ಈ ಬೆಳವಣಿಗೆಯನ್ನು ಸ್ವಾಗತಿಸಿ ಸಂಭ್ರಮಿಸಬೇಕು. ಸರ್ಕಾರದ ಅಭಿವೃದ್ಧಿ ಚಿಂತನೆಗಳಿಗೆ ಪಕ್ಷಾತೀತವಾಗಿ ಸಹಕಾರ ನೀಡುವ ಮೂಲಕ ಕರಾವಳಿಯ ಸಮಗ್ರ ಪ್ರಗತಿಗೆ ಎಲ್ಲರೂ ಕೈಜೋಡಿಸಬೇಕು. ಕರಾವಳಿಯ ನೈಸರ್ಗಿಕ ಸಂಪನ್ಮೂಲ, ಪ್ರವಾಸೋದ್ಯಮ, ಕೃಷಿ, ಮೀನುಗಾರಿಕೆ ಹಾಗೂ ಯುವಜನರ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗವನ್ನು ಅಭಿವೃದ್ಧಿಯ ಹೊಸ ಮಾದರಿಯನ್ನಾಗಿ ರೂಪಿಸುವ ಅವಕಾಶ ಇದೀಗ ದೊರೆತಿದೆ ಎಂದು ಅವರು ಹೇಳಿದರು.
ನಿರುದ್ಯೋಗಿ ಯುವಕರು–ಯುವತಿಯರು, ವಿದ್ಯಾರ್ಥಿಗಳು, ಉದ್ಯಮಿಗಳು, ವರ್ತಕರು ಸೇರಿದಂತೆ ಕರಾವಳಿಯ ಸಮಸ್ತ ನಾಗರಿಕರು ಸಮಗ್ರ ಕರಾವಳಿಯ ಅಭಿವೃದ್ಧಿಯ ದೃಷ್ಟಿಯಿಂದ ಸಂಪುಟ ಸಭೆ ನಡೆಸಲು ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದ್ಯೋಗಿಗಳನ್ನು ಜಾತಿ–ಮತ ಭೇದವಿಲ್ಲದೆ ಅಭಿನಂದಿಸಿ, ಈ ಮಹತ್ವದ ನಿರ್ಧಾರವನ್ನು ಸಂಭ್ರಮದಿಂದ ಸ್ವಾಗತಿಸಬೇಕು. ಅದೇ ರೀತಿ ಪಕ್ಷದ ಪಂಚಾಯತ್ ಮಟ್ಟದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸೆ. 18ರಂದು ಬೆಳಿಗ್ಗೆ 9 ಗಂಟೆಗೆ ಪಂಪ್‌ವೆಲ್‌ನಿಂದ ಪಡೀಲ್‌ವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವ ಮೂಲಕ, ಕರಾವಳಿಯ ಅಭಿವೃದ್ಧಿಯ ಈ ದಿಟ್ಟ ನಿರ್ಧಾರದ ಸಂದೇಶವನ್ನು ಗ್ರಾಮ ಪಂಚಾಯತ್ ಮಟ್ಟದವರೆಗೂ ತಲುಪಿಸಬೇಕೆಂದು ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮನವಿ ಮಾಡಿದ್ದಾರೆ.





