ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡು–ಬೆಂಗಳೂರು ಮಾರ್ಗದ ಮಾಣಿ ಸಮೀಪದ ಸತ್ತಿಕಲ್ಲು ಅಮೈ ಎಂಬಲ್ಲಿ ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.




