ಮಹದಾಯಿ ಹೋರಾಟದ ಪ್ರಕರಣ:
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
ಹುಬ್ಬಳ್ಳಿ: ಮಹದಾಯಿ ಹೋರಾಟದ ಹಿನ್ನೆಲೆಯಲ್ಲಿ 2013ರಲ್ಲಿ ರೈಲು ತಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಆರ್‌ಪಿಎಫ್ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
2013ರಲ್ಲಿ ರೈತರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸುಮಾರು ಆರು ಗಂಟೆಗಳ ಕಾಲ ರೈಲು ತಡೆ ನಡೆಸಲಾಗಿತ್ತು. ಮಹದಾಯಿ ಹೋರಾಟದ ಭಾಗವಾಗಿ ನಡೆದಿದ್ದ ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಇದೀಗ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.




