ಮಂಗಳೂರು: ಕಾರು, ಗೂಡ್ಸ್ ಆಟೋ, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ
ಮಂಗಳೂರು: ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಕಾರು, ಗೂಡ್ಸ್ ಆಟೋ ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೋರ್ಟ್ ರಸ್ತೆಯ ಇಳಿಜಾರು ಪ್ರದೇಶದಲ್ಲಿ ಚಲಿಸುತ್ತಿದ್ದ ಗೂಡ್ಸ್ ಆಟೋ ಮತ್ತು ಕರಂಗಲಪಾಡಿ ಕಡೆಯಿಂದ ಕೋರ್ಟ್ ರಸ್ತೆಯತ್ತ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ಅಪಘಾತದ ರಭಸಕ್ಕೆ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನವೂ ಸಿಲುಕಿ ಬಿದ್ದಿದೆ.ಮಂಗಳೂರು ಪ್ರವಾಸ
ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಗೂಡ್ಸ್ ಆಟೋದ ಚಾಲಕ ಇಬ್ಬರೂ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ, ಗೂಡ್ಸ್ ಆಟೋ ಹಾಗೂ ಬೈಕ್ ಮೂರೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಅಪಘಾತ ಸಂಭವಿಸಿದ ಕೂಡಲೇ ಕರಂಗಲಪಾಡಿ-ಕೋರ್ಟ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯಗೊಂಡಿತ್ತು. ಸುದ್ದಿ ತಿಳಿದ ಕೂಡಲೇ ಮಂಗಳೂರು ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಜಖಂಗೊಂಡ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.





