October 5, 2026

ಪುತ್ತೂರು: ಅಕ್ರಮವಾಗಿ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ  ಸಾಗಾಟ: ಶಿವಪ್ರಸಾದ್ ಎಂಬಾತನ ಬಂಧನ

0
image_editor_output_image47263067-1791210414310

ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಕೇರಳದ ಕಡೆಗೆ ಸಾಗಿಸುತ್ತಿದ್ದ ವೇಳೆ ಪುತ್ತೂರು ಗ್ರಾಮಾಂತರ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪದ ಮೇರೆಗೆ ಓರ್ವನನ್ನು ಬಂಧಿಸಲಾಗಿದೆ.

ಅ.5ರಂದು ಬೆಳಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ KA-19-AF-8558 ನೋಂದಣಿಯ ಪಿಕಪ್ ವಾಹನವನ್ನು ತಡೆದಿದ್ದಾರೆ.

 

ಈ ವೇಳೆ ವಾಹನದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ಬಳಿಕ ವಾಹನವನ್ನು ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 125/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(d) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಯಾವುದೇ ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!