ಉಡುಪಿ: ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು
ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ದೆಹಲಿ-ಎರ್ನಾಕುಲಂ ನಡುವೆ ಸಂಚರಿಸುವ ರೈಲು ಸಂಖ್ಯೆ 12284 ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಇಂದ್ರಾಳಿ ಮೂಲಕ ನಿಧಾನವಾಗಿ ಸಾಗುತ್ತಿದ್ದ ವೇಳೆ, ಎರಡನೇ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ರೈಲಿಗೆ ಇಂದ್ರಾಳಿಯಲ್ಲಿ ನಿಗದಿತ ನಿಲುಗಡೆ ಇಲ್ಲ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದು ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಅವರು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತರ ಬಳಿ ಪತ್ತೆಯಾದ ಮತದಾರರ ಗುರುತಿನ ಚೀಟಿಯ ಆಧಾರದ ಮೇಲೆ ಅವರ ಹೆಸರು ದಿನೇಶ್ ಎಂದು ತಿಳಿದುಬಂದಿದೆ. ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಕರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.





