ಮಣಿಪಾಲ: 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಮಣಿಪಾಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗಳಾದ ಮಹಮ್ಮದ್ ಹನೀಫ್ ಮತ್ತು ಫಯಾಜ್ ಮಹಮ್ಮದ್ ಅವರನ್ನು ಮಣಿಪಾಲ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ಗಳಾದ ಚೇತನ್ ಹಾಗೂ ಮಂಜುನಾಥ ಅವರು ಉಳ್ಳಾಲ ಹಾಗೂ ತಲಪಾಡಿ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿತರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.




