ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ದೋಟಿ ತಾಗಿ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಅಕ್ಟೋಬರ್ 8) ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ.
ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್ (38) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.
ಅಕ್ಟೋಬರ್ 4 ರಂದು ನಝೀರ್ ಅವರು ತಮ್ಮ ಮನೆಯ ಸಮೀಪದ ಅಡಿಕೆ ತೋಟದಲ್ಲಿ ದೋಟಿಯ ಮೂಲಕ ಅಡಿಕೆ ಕೊಯ್ಯುತ್ತಿದ್ದರು. ಈ ವೇಳೆ ತೋಟದ ಬಳಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದ್ದು, ತೀವ್ರ ಸ್ವರೂಪದ ವಿದ್ಯುತ್ ಆಘಾತಕ್ಕೊಳಗಾಗಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಕ್ಟೋಬರ್ 8 ರ ಗುರುವಾರ ಬೆಳಗ್ಗಿನ ಜಾವ ನಝೀರ್ ಕೊನೆಯುಸಿರೆಳೆದಿದ್ದಾರೆ.
ಘಟನೆ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






