ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ
ಬಂಟ್ವಾಳ: ಸಜಿಪ ಮೂಡ ಗ್ರಾಮದ ನಗ್ರಿ ಕಾಂಜಿಲ ಎಂಬಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಜಿತ್ ಕುಮಾರ್ (39) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ಬೆಂಗಳೂರಿನ ಬ್ಯಾಗ್ ಕಂಪೆನಿಯೊಂದರಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ರಜಿತ್ ಕುಮಾರ್, ಕಳೆದ ಮೂರು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಊರಿಗೆ ಬಂದು ಅಕ್ಕನ ಮನೆಯಲ್ಲಿ ವಾಸವಾಗಿದ್ದರು. ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೂ ತೆರಳಿದ್ದರು ಎನ್ನಲಾಗಿದೆ.
ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದ ಅವರು, ಶುಕ್ರವಾರ ಬೆಳಗ್ಗೆ ಎದ್ದೇಳದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.






